Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಮದುವೆಯ ಔತಣ

ಮತ್ತಾ 22:1–14 · ಲೂಕ 14:15–24

ಮತ್ತಾಯನು

ಮತ್ತಾ 22:1–14

1ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,

2“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

3ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.

4ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.

5ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;

6ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.

7ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

8ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.

9ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.

10ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.

11ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,

12ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.

13ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’

14ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.

ಲೂಕನು

ಲೂಕ 14:15–24

15ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,

16ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.

17ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.

18ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.

19ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.

20ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.

21ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.

22ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.

23ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.

24ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು