Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ

ಯಾಯೀರನ ಮಗಳು ಮತ್ತು ಆತನ ವಸ್ತ್ರವನ್ನು ಮುಟ್ಟಿದ ಸ್ತ್ರೀ

ಮತ್ತಾ 9:18–26 · ಮಾರ್ಕ 5:21–27, 29–43 · ಲೂಕ 8:40–41, 43–56

ಮತ್ತಾಯನು

ಮತ್ತಾ 9:18–26

18ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.

19ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.

20ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,

21“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.

22ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.

23ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,

24“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.

25ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.

26ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.

ಮಾರ್ಕನು

ಮಾರ್ಕ 5:21–27, 29–43

21ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.

22ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,

23“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

24ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.

25ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.

26ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.

27ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.

29ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.

30ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು

31ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.

32ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,

33ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.

34ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.

35ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.

36ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.

37ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.

38ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.

39ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,

40ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,

41ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.

42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.

43ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.

ಲೂಕನು

ಲೂಕ 8:40–41, 43–56

40ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.

41ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.

43ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.

44ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.

45ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.

46ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,

47ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.

48ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.

49ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.

50ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.

51ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.

52ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,

53ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.

54ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.

55ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.

56ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು