1ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
2ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
3ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
4ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.
5ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
6ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
7ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
8ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
9ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
10ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
11ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
12ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.