Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ನಿಮ್ಮ ವೈರಿಗಳನ್ನು ಪ್ರೀತಿಸಿರಿ

ಮತ್ತಾ 5:38–48 · ಲೂಕ 6:27–36

ಮತ್ತಾಯನು

ಮತ್ತಾ 5:38–48

38“‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.

39ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.

40ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.

41ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.

42ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.

43“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.

44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.

45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

46ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.

47ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.

48ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.

ಲೂಕನು

ಲೂಕ 6:27–36

27“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;

28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.

29ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.

30ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

31ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.

32“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.

33ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.

34ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.

35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.

36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು