Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಬಿತ್ತುವವನ ಸಾಮ್ಯದ ಅರ್ಥ

ಮತ್ತಾ 13:18–23 · ಮಾರ್ಕ 4:13–20 · ಲೂಕ 8:11–15

ಮತ್ತಾಯನು

ಮತ್ತಾ 13:18–23

18“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.

19ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.

20ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,

21ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.

22ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.

23ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.

ಮಾರ್ಕನು

ಮಾರ್ಕ 4:13–20

13ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?

14ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.

15ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

16“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;

17ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

18“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;

19ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.

20ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.

ಲೂಕನು

ಲೂಕ 8:11–15

11ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.

12ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.

13ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.

14ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.

15ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು