Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನ ದಾರಿಯಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನ ದಾರಿಯಲ್ಲಿ

ನಿಮ್ಮ ಶಿಲುಬೆಯನ್ನು ಹೊತ್ತುಕೊಳ್ಳಿರಿ

ಮತ್ತಾ 16:24–28 · ಮಾರ್ಕ 8:34–38; 9:1 · ಲೂಕ 9:23–27

ಮತ್ತಾಯನು

ಮತ್ತಾ 16:24–28

24ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

25ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.

26ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

27ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.

28“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

ಮಾರ್ಕನು

ಮಾರ್ಕ 8:34–38; 9:1

8:34ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

8:35ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.

8:36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?

8:37ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?

8:38ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

9:1ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.

ಲೂಕನು

ಲೂಕ 9:23–27

23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.

25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

26ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.

27ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು