22ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
23ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
24ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
25ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
26ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
27ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
28ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
29ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
30ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
31ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
32ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
33ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.