Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಚಿಂತೆಮಾಡಬೇಡಿರಿ

ಮತ್ತಾ 6:25–34 · ಲೂಕ 12:22–31

ಮತ್ತಾಯನು

ಮತ್ತಾ 6:25–34

25“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.

26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?

27ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?

28ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;

29ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.

30ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!

31ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.

32ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.

33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

34ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.

ಲೂಕನು

ಲೂಕ 12:22–31

22ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.

23ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.

24ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.

25ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ನಿಮ್ಮಲ್ಲಿ ಯಾರಿಂದಾದೀತು?

26ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?

27ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.

28ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.

29ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.

30ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

31ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು