ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೌಲ ಮತ್ತು ದಾವೀದ
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೌಲ ಮತ್ತು ದಾವೀದ
ರಬ್ಬಾ ವಶವಾಗುತ್ತದೆ
2 ಸಮು 12:26–31 · 1 ಪೂರ್ವ 20:1–3
2 ಸಮು 12:26–3126ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
27ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
28ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.
29ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.
30ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.
31ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
1 ಪೂರ್ವ 20:1–31ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
2ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
3ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.