Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೌಲ ಮತ್ತು ದಾವೀದ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೌಲ ಮತ್ತು ದಾವೀದ

ದೇವರ ಮಂಜೂಷ ಮತ್ತು ಉಜ್ಜ

2 ಸಮು 6:1–11 · 1 ಪೂರ್ವ 13:1–14

2 ಸಮುವೇಲನು

2 ಸಮು 6:1–11

1ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ

2ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.

3ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.

4ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.

5ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.

6ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

7ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

8ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.

9ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,

10ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

11ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

1 ಪೂರ್ವಕಾಲವೃತ್ತಾಂತ

1 ಪೂರ್ವ 13:1–14

1ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,

2“ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.

3ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.

4ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.

5ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ

6ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.

7ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.

8ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.

9ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.

10ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.

11ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.

12ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು

13ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

14ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು