ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 11 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಅಕ್ಟೋಬರ್ 2026
ಭಾನುವಾರ · ಸಾಮಾನ್ಯ ಕಾಲದ 28ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 28ನೇ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
6ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. 7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. 8ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. 9ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. 10ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
ಎರಡನೆಯ ವಾಚನ
12ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. 13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು. 19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು. 20ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್.
ಸುವಾರ್ತೆ
1ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ, 2“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. 3ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ. 4ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು. 5ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು; 6ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು. 7ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. 8ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ. 9ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು. 10ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು. 11ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, 12ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. 13ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’ 14ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
ಇಂದಿನ ಸಂತರು
- ಸಂತ ಜಾನ್ XXIII, ಪೋಪ್
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು