Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 19 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 6 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಅಕ್ಟೋಬರ್ 2026

ಸೋಮವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Holy and Glorious Apostle Thomas (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಫಿಲಿಪ್ಪಿ 4:10–23

10ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ. 11ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. 12ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. 13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು. 15ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ. 16ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ. 17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ. 18ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ. 19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು. 20ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍. 21ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. 22ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. 23ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.

ಪತ್ರಿಕೆ (ಅಪೊಸ್ತಲ ತೋಮ)

1 ಕೊರಿ 4:9–16

9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. 10ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. 11ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ, 12ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. 13ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. 14ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. 16ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಸುವಾರ್ತೆ

ಲೂಕ 6:24–30

24“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ. 25ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ. 26“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು. 27“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; 28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. 29ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. 30ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

ಸುವಾರ್ತೆ (ಅಪೊಸ್ತಲ ತೋಮ)

ಯೋಹಾ 20:19–31

19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. 30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. 31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 19 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು