Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 26 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಅಕ್ಟೋಬರ್ 2026

ಸೋಮವಾರ · ಸಾಮಾನ್ಯ ಕಾಲದ 30ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 30ನೇ ವಾರದ ಸೋಮವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 4:32–5:8

32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ. 5:1ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. 2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. 3ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. 4ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 5ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. 6ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. 7ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. 8ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.

ಪ್ರತಿವಚನ ಕೀರ್ತನೆ

ಕೀರ್ತ 1:1–4, 6

1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಸುವಾರ್ತೆ

ಲೂಕ 13:10–17

10ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ 13ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. 14ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು. 15ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. 16ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು. 17ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು