Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 27 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ಅಕ್ಟೋಬರ್ 2026

ಮಂಗಳವಾರ · ಸಾಮಾನ್ಯ ಕಾಲದ 30ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 30ನೇ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 5:21–33

21ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. 22ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. 24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. 25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. 28ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. 31“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. 32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. 33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

ಪ್ರತಿವಚನ ಕೀರ್ತನೆ

ಕೀರ್ತ 128:1–5

1ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.

ಸುವಾರ್ತೆ

ಲೂಕ 13:18–21

18ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ? 19ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು. 20ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? 21ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು