Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 30 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಅಕ್ಟೋಬರ್ 2026

ಶುಕ್ರವಾರ · ಸಾಮಾನ್ಯ ಕಾಲದ 30ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 30ನೇ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಫಿಲಿಪ್ಪಿ 1:1–11

1ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ, 2ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ. 3ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ. 5ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. 6ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು. 7ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ. 8ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. 9ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ, 11ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಪ್ರತಿವಚನ ಕೀರ್ತನೆ

ಕೀರ್ತ 111:1–6

1ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. 2ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. 3ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. 4ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. 5ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ 6ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.

ಸುವಾರ್ತೆ

ಲೂಕ 14:1–6

1ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು. 2ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, 3“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. 4ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ, 5“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು. 6ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು