Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 31 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 18 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಅಕ್ಟೋಬರ್ 2026

ಶನಿವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Holy Apostle and Evangelist Luke (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

1 ಯೋಹಾ 1:1–7

1ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು. 2ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. 3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ. 4ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ. 5ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ. 6ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. 7ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

ಸಂಧ್ಯಾ ಪ್ರಾರ್ಥನೆ: ವಾಚನ

ಯಾಕೋ 1:1–12

1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.” 2ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. 3ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. 4ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ. 5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ. 6ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ. 7ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. 8ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ. 9ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. 10ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. 11ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು. 12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ಸಂಧ್ಯಾ ಪ್ರಾರ್ಥನೆ: ವಾಚನ

ಯೂದ 1:1–7, 17–25

1ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ, 2ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ. 3ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. 4ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ. 5ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. 6ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. 7ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. 17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. 18“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು. 19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ. 20ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ. 21ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. 22ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ, 23ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ. 24ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ, 25ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಯೋಹಾ 21:15–25

15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. 16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. 17ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. 18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು. 19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಪತ್ರಿಕೆ

2 ಕೊರಿ 5:1–10

1ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. 2ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. 3ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. 4ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ. 5ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ. 6ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ 7ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ. 8ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ. 9ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ. 10ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.

ಪತ್ರಿಕೆ (ಸಂತ ಲೂಕ)

ಕೊಲೊ 4:5–9, 14, 18

5ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. 6ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. 7ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು. 8ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, 9ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. 14ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. 18ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.

ಸುವಾರ್ತೆ

ಲೂಕ 6:1–10

1ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು. 2ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ, 3ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? 4ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ, 5“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು. 6ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. 7ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. 8ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. 9ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ, 10ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.

ಸುವಾರ್ತೆ (ಸಂತ ಲೂಕ)

ಲೂಕ 10:16–21

16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. 17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು. 18ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು. 19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. 20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. 21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 31 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು