ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 1 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ನವೆಂಬರ್ 2026
ಭಾನುವಾರ · ಸಾಮಾನ್ಯ ಕಾಲದ 31ನೇ ವಾರ
ಹಬ್ಬಗಳು ಮತ್ತು ಸಂತರು
ಎಲ್ಲಾ ಸಂತರು
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
2ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, 3“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. 4ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. 9ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. 10ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. 11ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು, 12“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. 13ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು. 14ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ
ಎರಡನೆಯ ವಾಚನ
1ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. 2ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. 3ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
ಸುವಾರ್ತೆ
1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. 2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, 3“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. 4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. 5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. 6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. 7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. 8ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. 9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. 11“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು