ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 3 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ನವೆಂಬರ್ 2026
ಮಂಗಳವಾರ · ಸಾಮಾನ್ಯ ಕಾಲದ 31ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 31ನೇ ವಾರದ ಮಂಗಳವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಮಾರ್ಟಿನ್ ಡಿ ಪೊರೆಸ್, ಸನ್ಯಾಸಿ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, 11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ಪ್ರತಿವಚನ ಕೀರ್ತನೆ
25ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. 26ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ. 27ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು. 28ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. 29ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. 30ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. 31ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.
ಸುವಾರ್ತೆ
15ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು, 16ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು. 17ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು. 18ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. 19ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. 20ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು. 21ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು. 22ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು. 23ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ. 24ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.
ಇಂದಿನ ಸಂತರು
- ಸಂತ ಮಾರ್ಟಿನ್ ಡಿ ಪೊರೆಸ್, ಸನ್ಯಾಸಿ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು