Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 5 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ನವೆಂಬರ್ 2026

ಗುರುವಾರ · ಸಾಮಾನ್ಯ ಕಾಲದ 31ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 31ನೇ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಫಿಲಿಪ್ಪಿ 3:3–8

3ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ. 4ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. 5ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು, 6ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ. 7ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. 8ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.

ಪ್ರತಿವಚನ ಕೀರ್ತನೆ

ಕೀರ್ತ 105:2–7

2ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. 4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 5ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು, 6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

ಸುವಾರ್ತೆ

ಲೂಕ 15:1–10

1ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು. 2ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. 3ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 4ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? 5ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, 6ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ. 7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ. 8“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? 9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ. 10ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು