Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 1 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಡಿಸೆಂಬರ್ 2026

ಮಂಗಳವಾರ · ಆಗಮನ ಕಾಲದ ಮೊದಲನೆಯ ವಾರ

ಹಬ್ಬಗಳು ಮತ್ತು ಸಂತರು

ಆಗಮನ ಕಾಲದ ಮೊದಲನೆಯ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 11:1–10

1ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. 2ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು. 3ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ. 4ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು. 5ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ. 6ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು. 7ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು. 8ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು. 9ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು. 10ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.

ಪ್ರತಿವಚನ ಕೀರ್ತನೆ

ಕೀರ್ತ 72:1–2, 7–8, 12–13, 17

1ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. 2ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. 7ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. 8ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. 12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. 13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. 17ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

ಸುವಾರ್ತೆ

ಲೂಕ 10:21–24

21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. 22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು. 23ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. 24ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು