ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 2 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 19 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಡಿಸೆಂಬರ್ 2026
ಬುಧವಾರ · ಪಂಚಾಶತ್ತಮದ ನಂತರದ 27ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Prophet Obadiah (9th C BC)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
22ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ. 23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ. 24ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. 25ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು. 6:1ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ. 2ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. 3ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ, 4ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ. 5ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ. 6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. 7ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. 8ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ. 9ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. 10ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ. 11ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ಸುವಾರ್ತೆ
1ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು. 2ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. 3ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 4ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? 5ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, 6ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ. 7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ. 8“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? 9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ. 10ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 2 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು