Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 6 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಡಿಸೆಂಬರ್ 2026

ಭಾನುವಾರ · ಆಗಮನ ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಆಗಮನ ಕಾಲದ ಎರಡನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 40:1–5, 9–11

1“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ. 2ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ. 3ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ” 4ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು. 5ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ. 9ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು! 10ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ. 11ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

ಪ್ರತಿವಚನ ಕೀರ್ತನೆ

ಕೀರ್ತ 85:8–13

8ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

ಎರಡನೆಯ ವಾಚನ

2 ಪೇತ್ರ 3:8–14

8ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. 9ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 10ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. 11ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. 12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. 13ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು. 14ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.

ಸುವಾರ್ತೆ

ಮಾರ್ಕ 1:1–8

1ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು. 2ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.” 3“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ. 4ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು. 5ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು. 6ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು. 7ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. 8ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು