ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 6 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 23 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಡಿಸೆಂಬರ್ 2026
ಭಾನುವಾರ · ಸ್ವರ 2
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ 27ನೇ ಭಾನುವಾರ
ಕ್ರಿಸ್ತ ಜನನದ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಐದನೆಯ ಸುವಾರ್ತೆ
12ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು. 13ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ, 14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು. 15ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು. 16ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ. 17ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. 18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು, 19ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. 20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು. 21ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. 22ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. 24ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. 25ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, 26ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು. 27ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. 28ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು. 29ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು. 30ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ, 31ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. 32ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು, 33ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು. 34“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು. 35ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.
ಪತ್ರಿಕೆ
10ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. 13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 14ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, 15ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. 17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
ಪತ್ರಿಕೆ (ಸಂತ ಅಲೆಕ್ಸಾಂಡರ್)
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಸುವಾರ್ತೆ
16ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. 17ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ, 18‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು, 19ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. 20“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. 21ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
ಸುವಾರ್ತೆ (ಸಂತ ಅಲೆಕ್ಸಾಂಡರ್)
27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 6 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು