ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 8 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಡಿಸೆಂಬರ್ 2026
ಮಂಗಳವಾರ · ಆಗಮನ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಪೂಜ್ಯ ಕನ್ಯೆ ಮರಿಯಳ ನಿಷ್ಕಳಂಕ ಗರ್ಭಧಾರಣೆ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
9ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. 10ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. 11ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. 12ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. 13ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. 14ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. 15ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. 20ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
ಎರಡನೆಯ ವಾಚನ
3ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. 4ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು. 5ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. 6ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು. 11ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು. 12ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
ಸುವಾರ್ತೆ
26ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು; 27ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು. 28ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. 29ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು. 30ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. 31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. 32ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. 33ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. 34ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. 35ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು. 36ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು. 37ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು. 38ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು