ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 13 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಡಿಸೆಂಬರ್ 2026
ಭಾನುವಾರ · ಸ್ವರ 3
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ 28ನೇ ಭಾನುವಾರ
ಕ್ರಿಸ್ತ ಜನನದ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ, 2ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, 4ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ. 5ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ. 6ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. 7ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. 8ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. 10ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. 12ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. 13ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. 14ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, 15ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. 16ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. 17ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. 18ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. 19ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. 20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. 21ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. 22ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. 23ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. 24ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. 25ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ. 2ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ. 3ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ. 4ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ. 5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. 6“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
ಸಂಧ್ಯಾ ಪ್ರಾರ್ಥನೆ: ವಾಚನ
21ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. 22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. 23ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. 24ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 25ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ. 3:1ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು. 3ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. 4ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. 5ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು. 6ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ. 7ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ. 8ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ. 9ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
ಸಂಧ್ಯಾ ಪ್ರಾರ್ಥನೆ: ವಾಚನ
1ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. 2ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. 3ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. 4ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. 5ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. 6ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. 7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ. 8ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. 9ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. 10ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ. 11ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.
ಉದಯಕಾಲದ ಆರನೆಯ ಸುವಾರ್ತೆ
36ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು. 37ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. 38ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? 39ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. 40ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು. 41ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು, 42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು. 43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು. 44ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. 45ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು. 46ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, 47ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. 48ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ. 49ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. 50ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. 51ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. 52ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, 53ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
ಪತ್ರಿಕೆ
12ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ. 13ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. 14ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು. 15ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ. 16ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. 17ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. 18ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
ಪತ್ರಿಕೆ (ಸಂತ ಅಂದ್ರೆಯ)
9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. 10ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. 11ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ, 12ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. 13ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. 14ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. 16ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಸುವಾರ್ತೆ
10ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ 13ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. 14ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು. 15ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. 16ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು. 17ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
ಸುವಾರ್ತೆ (ಸಂತ ಅಂದ್ರೆಯ)
35ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು, 36ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು. 37ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. 38ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು. 39ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು. 40ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು. 41ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ, 42ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ) 43ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು. 44ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು. 45ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು. 46ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. 47ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. 48ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. 49ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು. 50ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. 51ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 13 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು