ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 18 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಡಿಸೆಂಬರ್ 2026
ಶುಕ್ರವಾರ · ಆಗಮನ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಡಿಸೆಂಬರ್ 18
ವಾರದ ದಿನ · ಆರಾಧನಾ ಬಣ್ಣ: ನೇರಳೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
5ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು. 6ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ. 7ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು, 8ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
ಪ್ರತಿವಚನ ಕೀರ್ತನೆ
1ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. 2ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. 12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. 13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. 18ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. 19ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
ಸುವಾರ್ತೆ
18ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. 20ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. 22ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, 23“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” 24ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು