ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 19 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ಡಿಸೆಂಬರ್ 2026
ಶನಿವಾರ · ಆಗಮನ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಡಿಸೆಂಬರ್ 19
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
2ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ. 3ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ. 4ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು. 5ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು. 6ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ. 7ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು. 24ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು. 25ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.
ಪ್ರತಿವಚನ ಕೀರ್ತನೆ
3ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ. 4ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು. 5ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ? 6ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ. 16ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು. 17ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
ಸುವಾರ್ತೆ
5ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್. 6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು. 7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು. 8ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು. 9ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು. 10ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ, 11ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. 12ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. 13ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. 14ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. 15ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. 16ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. 17ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. 18ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. 19ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. 20ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು. 21ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. 22ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. 23ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು. 24ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. 25“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು