ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 21 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 8 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಡಿಸೆಂಬರ್ 2026
ಸೋಮವಾರ · ಪಂಚಾಶತ್ತಮದ ನಂತರದ 30ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Venerable Patapios of Thebes (7th C)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. 8ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. 9‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. 10‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. 11ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ. 13ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.
ಸುವಾರ್ತೆ
27ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ, 28“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ. 29ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. 30ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. 32ಕಡೆಯಲ್ಲಿ ಆ ಹೆಂಗಸೂ ಸತ್ತಳು. 33ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು. 34ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. 35ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. 36ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ. 37ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ. 38ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. 39ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು. 40ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು. 41ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? 42“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. 44“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 21 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು