Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 10 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 28 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಜನವರಿ 2027

ಭಾನುವಾರ · ಸ್ವರ 7

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 32ನೇ ಭಾನುವಾರ

ಕ್ರಿಸ್ತ ಜನನದ ನಂತರದ ಭಾನುವಾರ

ಕ್ರಿಸ್ಮಸ್ ಕಾಲ (ಸ್ವ್ಯಾತ್ಕಿ)

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ 10ನೇ ಸುವಾರ್ತೆ

ಯೋಹಾ 21:1–14

1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. 3ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. 4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು. 6ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. 7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. 10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು, 11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ. 12ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. 13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು. 14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಪತ್ರಿಕೆ (ಕ್ರಿಸ್ತ ಜನನದ ನಂತರದ ಭಾನುವಾರ)

ಗಲಾ 1:11–19

11ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ. 12ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು. 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. 14ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು. 15ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು, 16ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ, 17ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. 18ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು. 19ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಸುವಾರ್ತೆ (ಕ್ರಿಸ್ತ ಜನನದ ನಂತರದ ಭಾನುವಾರ; ದೇವಮಾತೆಯ ಸಭಾಸ್ಮರಣೆ)

ಮತ್ತಾ 2:13–23

13ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು. 14ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು. 15ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು. 16ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. 17ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ, 18“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ. 19ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, 20“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು. 21ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು. 22ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು. 23ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 10 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು