Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 12 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಜನವರಿ 2027

ಮಂಗಳವಾರ · ಸಾಮಾನ್ಯ ಕಾಲದ ಮೊದಲನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಮೊದಲನೆಯ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 2:5–12

5ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ. 6“ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? 7ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. 8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ. 9ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ. 10ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು. 11ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ. 12“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,

ಪ್ರತಿವಚನ ಕೀರ್ತನೆ

ಕೀರ್ತ 8:1, 4–8

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. 4ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? 5ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. 6ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. 7ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, 8ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.

ಸುವಾರ್ತೆ

ಮಾರ್ಕ 1:21–28

21ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು. 22ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು. 23ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. 24ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. 25ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು. 26ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು. 27ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು. 28ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು