ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 13 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಜನವರಿ 2027
ಬುಧವಾರ · ಸಾಮಾನ್ಯ ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಮೊದಲನೆಯ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಪ್ವಾತಿಯೆಯ ಸಂತ ಹಿಲರಿ, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
14ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, 15ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು. 16ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ. 17ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು. 18ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. 2ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. 4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. 9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
ಸುವಾರ್ತೆ
29ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು. 30ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು. 31ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು. 32ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು. 33ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು. 34ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ. 35ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು. 36ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, 37ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು. 38ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು. 39ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
ಇಂದಿನ ಸಂತರು
- ಪ್ವಾತಿಯೆಯ ಸಂತ ಹಿಲರಿ, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು