Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 14 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 1 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಜನವರಿ 2027

ಗುರುವಾರ · ಪಂಚಾಶತ್ತಮದ ನಂತರದ 33ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Circumcision of our Lord

ಕ್ರಿಸ್ಮಸ್ ಕಾಲ (ಸ್ವ್ಯಾತ್ಕಿ)

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಆದಿ 17:1–2, 4–12, 14

1ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ. 2ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು. 4“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ, 5ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು. 6ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. 7ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. 8ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು. 9ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು. 10ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ. 11ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ. 12ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ; 14ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 8:22–30

22ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ. 23ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು. 24ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು. 25ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ, 26ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು. 27ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು. 28ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು. 29ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ, 30ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ,

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10:31–11:12

31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು. 32ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ. 11:1ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ. 2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ. 3ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ. 4ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ. 5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು. 6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು. 7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು. 8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು. 9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು. 10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು. 12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಯೋಹಾ 10:9–16

9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ಪತ್ರಿಕೆ (ಕರ್ತನ ಸುನ್ನತಿ)

ಕೊಲೊ 2:8–12

8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ. 9ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ, 10ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ. 11ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ. 12ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.

ಪತ್ರಿಕೆ (ಸಂತ ಬೇಸಿಲ್)

ಇಬ್ರಿ 7:26–8:2

26ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. 8:1ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.

ಸುವಾರ್ತೆ (ಕರ್ತನ ಸುನ್ನತಿ)

ಲೂಕ 2:20–21, 40–52

20ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. 21ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು. 40ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು. 41ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು. 42ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು. 43ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ, 44ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ, 45ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು. 46ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು. 47ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು. 48ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು, 49ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು. 50ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ. 51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು. 52ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.

ಸುವಾರ್ತೆ (ಸಂತ ಬೇಸಿಲ್)

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಜನವರಿ ಎಂದರೆ ನಾಗರಿಕ ಪಂಚಾಂಗದ 14 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು