ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 21 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಜನವರಿ 2027
ಗುರುವಾರ · ಸಾಮಾನ್ಯ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಎರಡನೆಯ ವಾರದ ಗುರುವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತ ಆಗ್ನೆಸ್, ಕನ್ಯೆ ಮತ್ತು ಹುತಾತ್ಮ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. 26ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. 8:1ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. 3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ. 4ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. 5ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. 6ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
ಪ್ರತಿವಚನ ಕೀರ್ತನೆ
6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. 7ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. 8ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. 9ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. 16ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.
ಸುವಾರ್ತೆ
7ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು. 8ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು. 9ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು. 10ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು. 11ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು. 12ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
ಇಂದಿನ ಸಂತರು
- ಸಂತ ಆಗ್ನೆಸ್, ಕನ್ಯೆ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು