Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 7 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 25 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಫೆಬ್ರವರಿ 2027

ಭಾನುವಾರ · ಸ್ವರ 3

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 36ನೇ ಭಾನುವಾರ

ರಷ್ಯಾದ ಹೊಸ ಹುತಾತ್ಮರು ಮತ್ತು ವಿಶ್ವಾಸ ನಿವೇದಕರು

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10; ಜ್ಞಾನೋ 3; ಜ್ಞಾನೋ 8 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಮೂರನೆಯ ಸುವಾರ್ತೆ

ಮಾರ್ಕ 16:9–20

9ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. 10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. 12ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. 13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. 14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. 15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. 17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. 19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. 20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

ಪತ್ರಿಕೆ

1 ತಿಮೊ 1:15–17

15ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. 16ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. 17ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಪತ್ರಿಕೆ (ಸಂತ ಗ್ರೆಗೊರಿ)

1 ಕೊರಿ 12:7–11

7ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. 8ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು 9ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು, 10ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ. 11ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.

ಸುವಾರ್ತೆ

ಲೂಕ 18:35–43

35ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು, 36ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. 37ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ, 38ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು. 39ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು. 40ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ, 41ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು. 42ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು. 43ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

ಸುವಾರ್ತೆ (ಸಂತ ಗ್ರೆಗೊರಿ)

ಯೋಹಾ 10:9–16

9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 25 ಜನವರಿ ಎಂದರೆ ನಾಗರಿಕ ಪಂಚಾಂಗದ 7 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು