ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 8 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಫೆಬ್ರವರಿ 2027
ಸೋಮವಾರ · ಸಾಮಾನ್ಯ ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಐದನೆಯ ವಾರದ ಸೋಮವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಜೆರೋಮ್ ಎಮಿಲಿಯಾನಿ, ಧರ್ಮಗುರು · ಐಚ್ಛಿಕ ಸ್ಮರಣೆ
ಸಂತ ಜೋಸೆಫೀನ್ ಬಖೀತಾ, ಕನ್ಯೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. 2ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. 3ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. 4ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. 5ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. 6ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. 7ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. 8ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. 9ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. 10ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. 11ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. 12ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು 13ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. 14ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. 15ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. 16ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. 17ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ 18ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು. 19ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
ಪ್ರತಿವಚನ ಕೀರ್ತನೆ
ಕೀರ್ತ 104:1–2, 5–6, 10–12, 24, 35
1ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ. 2ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ. 5ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ. 6ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು. 10ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ. 11ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ. 12ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. 24ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ. 35ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.
ಸುವಾರ್ತೆ
53ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು. 54ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು, 55ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು. 56ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
ಇಂದಿನ ಸಂತರು
- ಸಂತ ಜೆರೋಮ್ ಎಮಿಲಿಯಾನಿ, ಧರ್ಮಗುರು
- ಸಂತ ಜೋಸೆಫೀನ್ ಬಖೀತಾ, ಕನ್ಯೆ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು