Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 9 ಫೆಬ್ರವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ಫೆಬ್ರವರಿ 2027

ಮಂಗಳವಾರ · ಸಾಮಾನ್ಯ ಕಾಲದ ಐದನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಐದನೆಯ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 1:20–2:4

20ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. 21ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. 22ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. 23ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. 24ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. 25ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. 26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. 27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” 28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. 29ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ 30ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. 31ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು. 2:1ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. 2ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. 3ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. 4ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.

ಪ್ರತಿವಚನ ಕೀರ್ತನೆ

ಕೀರ್ತ 8:3–8

3ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, 4ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? 5ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. 6ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. 7ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, 8ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.

ಸುವಾರ್ತೆ

ಮಾರ್ಕ 7:1–13

1ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು. 2ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು. 3ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ. 4ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು. 5ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು. 6ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ. 7ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ. 8ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು. 9ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ; 10‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ. 11ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ 12ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ. 13ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು