ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 14 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 1 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಫೆಬ್ರವರಿ 2027
ಭಾನುವಾರ · ಸ್ವರ 4
ಹಬ್ಬಗಳು ಮತ್ತು ಸಂತರು
ಜಕ್ಕಾಯನ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ನಾಲ್ಕನೆಯ ಸುವಾರ್ತೆ
1ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. 2ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು, 3ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ. 4ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು. 5ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? 6ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು. 8ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು, 9ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು. 10ಆ ಸ್ತ್ರೀಯರು ಯಾರಾರೆಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು. 11ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು. 12ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.
ಪತ್ರಿಕೆ
9ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ. 10ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ. 11ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. 12ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. 13ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. 14ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. 15ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.
ಪತ್ರಿಕೆ (ಸಂತ ಟ್ರಿಫೊನ್)
28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. 29ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. 30ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು. 31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು? 32ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? 33ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. 34ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ? 35ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? 36“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. 37ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. 38ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, 39ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ಸುವಾರ್ತೆ
1ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ, 2ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು. 3ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು. 4ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು. 5ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು, 6ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು. 7ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು. 8ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು. 9ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ. 10ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
ಸುವಾರ್ತೆ (ಸಂತ ಟ್ರಿಫೊನ್)
19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. 20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. 21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 14 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು