ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 21 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಫೆಬ್ರವರಿ 2027
ಭಾನುವಾರ · ತಪಸ್ಸು ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಎರಡನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
1ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು. 2ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು. 9ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. 10ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು. 11ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು. 12ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು. 13ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. 15ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, 16“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ 17ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. 18ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
ಪ್ರತಿವಚನ ಕೀರ್ತನೆ
10“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ, 15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. 16ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. 17ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 18ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ, 19ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!
ಎರಡನೆಯ ವಾಚನ
31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು? 32ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? 33ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. 34ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
ಸುವಾರ್ತೆ
2ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು. 3ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು. 4ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು. 5ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು. 6ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು. 7ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು. 8ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. 9ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು. 10ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಇಂದಿನ ಸಂತರು
- ಸಂತ ಪೀಟರ್ ಡೇಮಿಯನ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು