Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 21 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 8 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಫೆಬ್ರವರಿ 2027

ಭಾನುವಾರ · ಸ್ವರ 5

ಹಬ್ಬಗಳು ಮತ್ತು ಸಂತರು

ಸುಂಕದವನ ಮತ್ತು ಫರಿಸಾಯನ ಭಾನುವಾರ

ಉಪವಾಸದ ತ್ರಿಯೋಡಿಯನ್ ಆರಂಭ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಐದನೆಯ ಸುವಾರ್ತೆ

ಲೂಕ 24:12–35

12ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು. 13ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ, 14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು. 15ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು. 16ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ. 17ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. 18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು, 19ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. 20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು. 21ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. 22ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. 24ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. 25ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, 26ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು. 27ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. 28ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು. 29ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು. 30ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ, 31ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. 32ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು, 33ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು. 34“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು. 35ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.

ಪತ್ರಿಕೆ

2 ತಿಮೊ 3:10–15

10ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ, 11ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು. 12ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. 13ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು. 14ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು. 15ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.

ಸುವಾರ್ತೆ

ಲೂಕ 18:10–14

10ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು. 11ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ. 12ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು. 13ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು. 14ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 21 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು