Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 28 ಫೆಬ್ರವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಫೆಬ್ರವರಿ 2027

ಭಾನುವಾರ · ತಪಸ್ಸು ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ಮೂರನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ವಿಮೋ 20:1–17

1ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು: 2“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’ 3ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು. 4“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. 5ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು. 6ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು. 7ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. 8“ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು. 9ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು. 10ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು. 11ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. 12“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ. 13“ಕೊಲೆ ಮಾಡಬಾರದು. 14“ವ್ಯಭಿಚಾರಮಾಡಬಾರದು. 15“ಕದಿಯಬಾರದು. 16“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. 17“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”

ಪ್ರತಿವಚನ ಕೀರ್ತನೆ

ಕೀರ್ತ 19:7–10

7ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. 8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. 9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. 10ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಎರಡನೆಯ ವಾಚನ

1 ಕೊರಿ 1:22–25

22ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; 23ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. 24ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ. 25ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.

ಸುವಾರ್ತೆ

ಯೋಹಾ 2:13–25

13ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು. 14ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. 15ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. 16ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. 17ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು. 18ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. 19ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು. 20ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು. 21ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು. 22ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. 23ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. 24ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ, 25ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು