Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 28 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 15 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಫೆಬ್ರವರಿ 2027

ಭಾನುವಾರ · ಸ್ವರ 6

ಹಬ್ಬಗಳು ಮತ್ತು ಸಂತರು

ದುಂದುಗಾರ ಮಗನ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಆರನೆಯ ಸುವಾರ್ತೆ

ಲೂಕ 24:36–53

36ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು. 37ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. 38ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? 39ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. 40ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು. 41ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು, 42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು. 43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು. 44ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. 45ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು. 46ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, 47ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. 48ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ. 49ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. 50ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. 51ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. 52ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, 53ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.

ಪತ್ರಿಕೆ

1 ಕೊರಿ 6:12–20

12“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ. 13“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ. 14ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು. 15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು 16ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ. 17ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ. 18ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. 19ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? 20ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

ಸುವಾರ್ತೆ

ಲೂಕ 15:11–32

11ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. 12ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. 13ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. 14ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು. 15ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. 16ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ. 17ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. 18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ. 19ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು, 20ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು. 21ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು, 22ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ, 23ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ. 24ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು. 25ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ, 26ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು. 27ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು. 28ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. 29ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. 30ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು. 31ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ. 32ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 28 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು