ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 14 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಮಾರ್ಚ್ 2027
ಭಾನುವಾರ · ತಪಸ್ಸು ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಐದನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
31ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. 32ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. 33ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ. 34ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. 2ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. 10ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. 11ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. 12ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. 13ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
ಎರಡನೆಯ ವಾಚನ
7ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. 8ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. 9ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
ಸುವಾರ್ತೆ
20ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು. 21ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು. 22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು. 23ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ. 24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು 25ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. 26ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. 27ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ? 28ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು. 29ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು. 30ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. 31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು 32ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. 33ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು