ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 14 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 1 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಮಾರ್ಚ್ 2027
ಭಾನುವಾರ · ಸ್ವರ 8
ಹಬ್ಬಗಳು ಮತ್ತು ಸಂತರು
ಗಿಣ್ಣು ತ್ಯಾಗದ ಭಾನುವಾರ. ಆದಾಮನನ್ನು ಪರದೈಸಿನಿಂದ ಹೊರಹಾಕಿದ್ದು
ಕ್ಷಮೆಯ ಭಾನುವಾರ
ಗಿಣ್ಣಿನ ವಾರ
ಮಾಂಸವಿಲ್ಲ; ಹಾಲಿನ ಪದಾರ್ಥ, ಮೊಟ್ಟೆ ಮತ್ತು ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಎಂಟನೆಯ ಸುವಾರ್ತೆ
11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು, 12ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. 13ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು. 14ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ. 15ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು. 16ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ. 17ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು. 18ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
ಪತ್ರಿಕೆ
11ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ. 12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ. 13ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. 14ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. 14:1ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. 2ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ. 3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ? 4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
ಸುವಾರ್ತೆ
14ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. 15ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. 16“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 17ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. 18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು. 19“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. 20ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ, 21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 14 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು