Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 18 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 5 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಮಾರ್ಚ್ 2027

ಗುರುವಾರ · ಮಹಾ ಉಪವಾಸದ ಮೊದಲನೆಯ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Martyr Conon of Isauria (1st C)

ಮಹಾ ಉಪವಾಸ ಕಾಲ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಆರನೆಯ ತಾಸು

ಯೆಶಾ 2:11–21

11ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. 12ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು. 13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ, 14ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ, 15ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ, 16ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು. 17ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. 18ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು. 19ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು. 20ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು. 21ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.

ಸಂಧ್ಯಾ ಪ್ರಾರ್ಥನೆ: ವಾಚನ

ಆದಿ 2:4–19

4ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ. 5ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. 6ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು. 7ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು. 8ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. 9ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. 10ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. 11ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. 12ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ. 13ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. 14ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ. 15ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು. 16ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. 17ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. 18ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. 19ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 3:1–18

1ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು. 2ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು. 3ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. 4ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ. 5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. 6ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. 7ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು. 8ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು. 9ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. 10ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು. 11ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. 12ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ. 13ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. 14ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. 15ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. 16ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು. 17ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ. 18ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 18 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು