Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 21 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 8 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಮಾರ್ಚ್ 2027

ಭಾನುವಾರ · ಸ್ವರ 1

ಹಬ್ಬಗಳು ಮತ್ತು ಸಂತರು

ಮಹಾ ಉಪವಾಸದ ಮೊದಲನೆಯ ಭಾನುವಾರ

ಆರ್ಥೊಡಾಕ್ಸಿಯ ಭಾನುವಾರ

ಮಹಾ ಉಪವಾಸ ಕಾಲ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ 9ನೇ ಸುವಾರ್ತೆ

ಯೋಹಾ 20:19–31

19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. 30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. 31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ಪತ್ರಿಕೆ

ಇಬ್ರಿ 11:24–26, 32–12:2

24ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು. 25ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು. 26ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು. 32ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು. 33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., 34ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. 36ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. 37ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. 38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. 39ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ. 40ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು. 12:1ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

ಸುವಾರ್ತೆ

ಯೋಹಾ 1:43–51

43ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು. 44ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು. 45ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು. 46ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. 47ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. 48ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. 49ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು. 50ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. 51ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 21 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು