Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 23 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಮಾರ್ಚ್ 2027

ಮಂಗಳವಾರ · ಪವಿತ್ರ ವಾರ

ಹಬ್ಬಗಳು ಮತ್ತು ಸಂತರು

ಪವಿತ್ರ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 49:1–6

1ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. 2ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. 3ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು. 4ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು. 5ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ. 6ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಪ್ರತಿವಚನ ಕೀರ್ತನೆ

ಕೀರ್ತ 71:1–6, 15, 17

1ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ. 2ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು. 3ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ. 4ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು. 5ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ? 6ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ. 15ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ. 17ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.

ಸುವಾರ್ತೆ

ಯೋಹಾ 13:21–33, 36–38

21ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು. 22ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು. 23ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು. 24ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು. 25ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು. 26ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು. 27ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು. 28ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ. 29ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು. 30ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು. 31ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ. 32ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು. 33ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ. 36ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು. 37ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು. 38ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು