Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 25 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ಮಾರ್ಚ್ 2027

ಗುರುವಾರ · ಪಾಸ್ಕ ತ್ರಿದಿನ

ಹಬ್ಬಗಳು ಮತ್ತು ಸಂತರು

ಪವಿತ್ರ ಗುರುವಾರ

ಪಾಸ್ಕ ತ್ರಿದಿನ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ವಿಮೋ 12:1–8, 11–14

1ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2“ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು. 3ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು. 4ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ. 5ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು. 6ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು. 7ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು. 8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು. 11ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು. 12ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು. 13ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ. 14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಪ್ರತಿವಚನ ಕೀರ್ತನೆ

ಕೀರ್ತ 116:12–13, 15–18

12ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ? 13ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. 16ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. 17ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 18ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,

ಎರಡನೆಯ ವಾಚನ

1 ಕೊರಿ 11:23–26

23ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು, 24“ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು. 25ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು. 26ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

ಸುವಾರ್ತೆ

ಯೋಹಾ 13:1–15

1ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು. 2ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು. 3ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು. 4ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು. 5ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು. 6ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು. 7ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು. 8ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. 9ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು. 10ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು. 11ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು. 12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? 13ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ. 14ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು. 15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು