Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 25 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 12 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಮಾರ್ಚ್ 2027

ಗುರುವಾರ · ಮಹಾ ಉಪವಾಸದ ಎರಡನೆಯ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Venerable Theophanes the Confessor of Sigriane († 818)

ಮಹಾ ಉಪವಾಸ ಕಾಲ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಆರನೆಯ ತಾಸು

ಯೆಶಾ 6:1–12

1ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು. 2ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. 3ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. 4ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು. 5ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು, 6ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು, 7ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು. 8ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು. 9ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ, 10ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು. 11ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು. 12ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.

ಸಂಧ್ಯಾ ಪ್ರಾರ್ಥನೆ: ವಾಚನ

ಆದಿ 5:1–24

1ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು. 2ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. 3ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. 4ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು. 5ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು. 6ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು. 7ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು. 8ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು. 9ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು. 10ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು. 11ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು. 12ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು. 13ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು. 14ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು. 15ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು. 16ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು. 17ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು. 18ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು. 19ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು. 20ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು. 21ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು. 22ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು. 23ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು. 24ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 6:3–20

3ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ, 4ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ; 5ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ. 6ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. 7ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ, 8ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು. 9ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ? 10“ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ? 11ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. 12ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ, 13ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ. 14ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ. 15ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು. 16ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. 17ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ, 18ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು, 19ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ. 20ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 25 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು