Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 28 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 15 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಮಾರ್ಚ್ 2027

ಭಾನುವಾರ · ಸ್ವರ 2

ಹಬ್ಬಗಳು ಮತ್ತು ಸಂತರು

ಮಹಾ ಉಪವಾಸದ ಎರಡನೆಯ ಭಾನುವಾರ

ಮಹಾ ಉಪವಾಸ ಕಾಲ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ 10ನೇ ಸುವಾರ್ತೆ

ಯೋಹಾ 21:1–14

1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. 3ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. 4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು. 6ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. 7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. 10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು, 11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ. 12ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. 13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು. 14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಪತ್ರಿಕೆ

ಇಬ್ರಿ 1:10–2:3

10“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, 11ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ. 13ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? 14ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ? 2:1ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. 2ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. 3ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

ಪತ್ರಿಕೆ (ಸಂತ ಗ್ರೆಗೊರಿ)

ಇಬ್ರಿ 7:26–8:2

26ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. 8:1ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.

ಸುವಾರ್ತೆ

ಮಾರ್ಕ 2:1–12

1ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು. 2ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 3ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. 4ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. 5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 6ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; 7“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. 8ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? 9ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? 10ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ 11“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು. 12ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.

ಸುವಾರ್ತೆ (ಸಂತ ಗ್ರೆಗೊರಿ)

ಯೋಹಾ 10:9–16

9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 28 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು