ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 2 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ಏಪ್ರಿಲ್ 2027
ಶುಕ್ರವಾರ · ಪಾಸ್ಕದ ಅಷ್ಟದಿನ
ಹಬ್ಬಗಳು ಮತ್ತು ಸಂತರು
ಪಾಸ್ಕದ ಅಷ್ಟದಿನದ ಶುಕ್ರವಾರ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
1ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು. 2ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು. 3ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು. 4ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. 5ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು. 6ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು. 7ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು, 8ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ, 9ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ. 10ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ. 11“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. 12ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 2ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 4ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 22ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 23ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. 24ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. 25ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. 26ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. 27ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
ಸುವಾರ್ತೆ
1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. 3ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. 4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು. 6ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. 7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. 10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು, 11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ. 12ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. 13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು. 14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
ಇಂದಿನ ಸಂತರು
- ಪಾವೊಲಾದ ಸಂತ ಫ್ರಾನ್ಸಿಸ್, ಏಕಾಂತವಾಸಿ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು